ಕಿರುಸಾಲ ದೌರ್ಜನ್ಯಕ್ಕೆ ಕಡಿವಾಣ
ತೊಂದರೆ ನೀಡದಂತೆ ಫೈನಾನ್ಸ್‌ಗಳಿಗೆ ಮುಖ್ಯಕಾರ್ಯದರ್ಶಿ ತಾಕೀತು ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬ ಮಾಡಿದ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದೌರ್ಜನ್ಯಗಳನ್ನು ದಬ್ಬಾಳಿಕೆ. ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಹೇಳಿದ್ದಾರೆ. ಕೆಲವು ವ್ಯಕ್ತಿಗಳು ಸಾಮಾಜಿಕ, ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಹಣ ಖರ್ಚು ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ. ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕ ಲೇವಾದೇವಿದಾರರ ಅಧಿನಿಯಮ-1961ರ ಅಡಿಯಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಈ ಅಧಿನಿಯಮದಡಿಯಲ್ಲಿ 2024ರ ಡಿ .31 ರವರೆಗೆ 20,425 ಸಂಸ್ಥೆಗಳು ನೋಂದಾಣಿಯಾಗಿದೆ ಅದರಲ್ಲಿ 6,590 ಲೇವಾದೇವಿದಾರರು, 6,772 ಪಾನ್ ಬ್ರೋಕರ್ ಗಳು, 7,063 ಹಣಕಾಸಿನ ಸಂಸ್ಥೆಗಳು ಇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004ರ ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ. ಇಂತಹ ಮಾಹಿತಿಗಳನ್ನು ಸಾರ್ವಜನಿಕವಾಗಿ ಫಲಕಗಳ ಮೂಲಕ ಪ್ರದರ್ಶಿಸಲು ಸಂಸ್ಥೆಗಳು ಹಾಗೂ ಸಂಬಂಧಿಸಿದ ಕಚೇರಿಗಳಿಗೆ ತಿಳಿಸಲಾಗಿದೆ. ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿ ಕೊಳ್ಳಬೇಕು. ಈ ಪ್ರಕ್ರಿಯೆಗಳಿಂದ ಸಾಲ ಮರು ಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಕೇವಲ 31 ಮೈಕ್ರೋ ಫೈನಾನ್ಸ್ ಇಂಡಸ್ಟ್ರಿಗಳು ಅಸ್ತಿತ್ವದಲ್ಲಿ ಇವೆ. ಈ 31 ಸಂಸ್ಥೆಗಳು ಅಸೋಸಿಯೇಷನ್ ಆಫ್ ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್‌ಸ್ಟಿಟ್ಯೂಷನ್ ಸದಸ್ಯತ್ವ ಪಡೆದಿವೆ.ರಾಜ್ಯದಲ್ಲಿ ಈ ಸಂಸ್ಥೆಗಳ 3090 ಶಾಖೆಗಳಿದ್ದು 37,967 ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. 1,09,88,332 ಖಾತೆಗಳಲ್ಲಿ59,367.76 ಕೋಟಿ ರೂ. ಬಾಕಿ ಉಳಿದಿದೆ. ಇದರಲ್ಲಿ ನಿಯಮಗಳನ್ನು ಪಾಲಿಸದ ಹಣಕಾಸು ಸಂಸ್ಥೆಗಳ ಬಗ್ಗೆ ಮೇಲ್ವಿಚಾರಣಾ ಸಂಸ್ಥೆಗಳ ಮೂಲಕ ಭಾರತೀಯ ರಿಸರ್ವ್ ಬ್ಯಾಂಕಿಗೆ ವರದಿ ನೀಡಲಾಗುತ್ತದೆ. ಆರ್ ಬಿಐ ಒಪ್ಪಿಗೆಯೊಂದಿಗೆ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.
ಸೂಕ್ಷ್ಮ ಹಣಕಾಸು ಸಂಸ್ಥೆ, ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಸಹಾಯವಾಣಿ ಸಂಖ್ಯೆ 14448 ಗೆ ಮಾಹಿತಿ ನೀಡಬಹುದು. ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್ ಸಾಲಗಾರರಿಗೆ ಎಲ್ಲ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: 112 ಅಥವಾ 1902 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.